ಹುಬ್ಬಳ್ಳಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ಯಾವಾಗ ಎಂಬುದು ಗೊತ್ತಿಲ್ಲ. ಆದರೆ ಸೇರ್ಪಡೆ ಆಗುವ ಕಾಲ ಬಂದಿದೆ. ಒಂದು ತೀರ್ಮಾನಕ್ಕೆ ಬರಲಾಗುವುದು. ಈಗಾಗಲೇ ರಾಜ್ಯದ ಬಿಜೆಪಿ ಮುಖಂಡರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ತಿಳಿಸಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನ್ನೊಂದಿಗೆ ಸೇರ್ಪಡೆ ವಿಷಯವಾಗಿ ಮಾತನಾಡಿದ್ದಾರೆ ನಾನು ಕೂಡಾ ಒಪ್ಪಿಕೊಂಡಿದ್ದೇನೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗಧಿಪಡಿಸಲಾಗುವುದು ಎಂದರು.
ನಿಮ್ಮ ಸ್ಪರ್ಧೆಗೆ ಬಿಜೆಪಿಯ ಕೆಲವರಿಂದ ವಿರೋಧ ವ್ಯಕ್ತವಾಗುತ್ತಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಬಿ.ಎಸ್.ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.