ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಇನ್ನೇನು ದಿನಗಣನೇ ಆರಂಭವಾಗಿದೆ. ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಟಿಕೆಟ್ ಪಡೆಯಲು ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಅದರಂತೆ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವು ಕೂತುಕೂಲ ಕೆರಳಿಸಿದೆ.
ಈಗಾಗಲೇ ಸತತವಾಗಿ ಬಿಜೆಪಿ ಅಭ್ಯರ್ಥಿ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯ ಗೆಲುವಿನ ನಾಗಾಕೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಇನ್ನಿಲ್ಲದ ತಂತ್ರ ರೂಪಿಸುತ್ತಿದೆ.
ಹೀಗಾಗಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಲೆಕ್ಕಾಚಾರವನ್ನು ಕಾಂಗ್ರೆಸ್ ಹೊಂದಿದೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಹೆಚ್ಚಿರುವ ಕಾರಣ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಾಸ್ ಬಿಜೆಪಿ ಸೇರ್ಪಡೆಗೊಂಡ ಕಾರಣ ಇನ್ನು ಅನೇಕ ಕಾರಣದಿಂದ ಲಿಂಗಾಯತ ಸಮೂದಾಯದ ಮುಖಂಡನನ್ನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಪ್ಲಾನ್ ಸಹ ಕಾಂಗ್ರೆಸ್ ಹೊಂದಿದ್ದು, ಇದಕ್ಕಾಗಿ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಸಮುದಾಯದ ಮುಖಂಡರಾದ ಮೋಹನ್ ಲಿಂಬಿಕಾಯಿ ಹೆಸರು ಮುಂಚೂಣಿಗೆ ಬರುತ್ತಿದೆ. ಇವರನ್ನು ಬಿಟ್ಟು ಶಿವಲಿಲಾ ಕುಲಕರ್ಣಿ ಅವರ ಹೆಸರು ಕೇಳಿಬರುತ್ತಿದೆ.
ಮತ್ತೊಂದೆಡೆ ಸಚಿವರಾಗಿರುವ ಸಂತೋಷ ಲಾಡ್, ಮುಖಂಡರಾದ ಅನಿಲಕುಮಾರ ಪಾಟೀಲ್, ಸದಾನಂದ ಡಂಗನವರ, ರಜತ್ ಉಳ್ಳಾಗಡ್ಡಿಮಠ ಹೆಸರು ಸಹ ಇವೆ. ಆದರೆ ಹೈಕಮಾಂಡ ಕ್ಷೇತ್ರವನ್ನು ಶತಾಯಗತಾಯ ಗೆಲುವು ಸಾಧಿಸಬೇಕೆಂಬ ದೃಷ್ಟಿಯಿಂದ ಸೂಕ್ತ ಅಭ್ಯರ್ಥಿ ಆಯ್ಕೆಗೆ ಸರ್ವೇ ಕಾರ್ಯ ನಡೆಸಿದ್ದು, ಸುರ್ಜೇವಾಲ್, ಸಿದ್ದರಾಮಯ್ಯ, ಡಿಕೆಶಿ ನಡೆಸುವ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಗೊತ್ತಾಗಲಿದೆ.
ಬಿಜೆಪಿಯಲ್ಲಿ ಯಾರಾಗತ್ತಾರೆ ಅಭ್ಯರ್ಥಿ: ಕಾಂಗ್ರೆಸ್’ನಂತೆ ಬಿಜೆಪಿಯಲ್ಲಿ ಟಿಕೆಟ್ ವಿಚಾರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿರುವ ಪ್ರಲ್ಹಾದ್ ಜೋಶಿ ಅವರಿಗೆ ಈ ಬಾರಿಯೂ ಟಿಕೆಟ್ ಎಂದು ಹೇಳುತ್ತಲಿದ್ದರೂ, ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ನಡೆದಂತೆ ಬಿಜೆಪಿ ಹೈಕಮಾಂಡ ಚುನಾವಣೆ ಲೆಕ್ಕಾಚಾರ ಹಾಕಲಿದೆ ಹೀಗಾಗಿ ಅಭ್ಯರ್ಥಿ ಬದಲಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಬಿಜೆಪಿ ಪಕ್ಷದ ಮುಖಂಡರು ನೀಡುತ್ತಿರುವ ಹೇಳಿಕೆಗಳೇ ಮತ್ತಷ್ಟು ಪುಷ್ಠಿ ನೀಡುತ್ತಿವೆ. ಹೀಗಾಗಿ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಆನಂದ ಸಂಕೇಶ್ವರ ಹೀಗೆ ನಾನಾ ಹೆಸರುಗಳು ಕೇಳಿಬರುತ್ತಿವೆ.
ಒಟ್ಟಾರೆಯಾಗಿ ಲೋಕಸಭಾ ಚುನಾವಣೆ ಕಾವು ದಿನದಿಂದ ಹೆಚ್ಚಾಗುತ್ತಿದ್ದು, ಈ ಮಧ್ಯೆ ಟಿಕೆಟ್ ವಿಚಾರವು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಈ ದಿಸೆಯಲ್ಲಿ ಇಂದು ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಯುವ ಸಭೆ ಮಹತ್ವವನ್ನು ಪಡೆದುಕೊಂಡಿದೆ.