
ಮುಂಡಗೋಡ: ಪಟ್ಟಣದ ಕಾರ್ಮಿಕ ಭವನ (ಹೆಬ್ಬಾರ ಹಾಲ್) ಸಮೀಪದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಸುಟ್ಟು ಕರಕಲಾಗಿರುವ ಘಟನೆ ಮಂಗಳವಾರ ನಡೆದಿದೆ.
ಘಟಕದಲ್ಲಿ ಸಂಗ್ರಹಿಸಲಾಗಿದ್ದ ಕಸದ ರಾಶಿಗೆ ಮೊದಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿದೆ. ಪರಿಣಾಮವಾಗಿ ತ್ಯಾಜ್ಯ ವಿಲೇವಾರಿಗೆ ಬಳಸಲಾಗುತ್ತಿದ್ದ ಪ್ರಮುಖ ಯಂತ್ರೋಪಕರಣಗಳು ಸಂಪೂರ್ಣವಾಗಿ ನಾಶವಾಗಿವೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೆಂಕಿ ಅವಘಡದಿಂದ ಘಟಕಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಿಡಿಗೇಡಿಗಳ ಕೃತ್ಯವೋ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವುದೋ ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.




