ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ನೈತಿಕ ಪೋಲಿಸ್ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್’ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೋಲಿಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೋಲಿಸ್ ಗಿರಿ ಮಾಡಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಸರ್ಕಾರ ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿತ್ತದೆ. ಮಹಿಳೆಯರು ಯಾರು ಆತಂಕ ಪಡುವ ಅಗತ್ಯವಿಲ್ಲ. ಕಿಡಿಗೇಡಿಗಳು ಇಂತಹ ಕೃತ್ಯ ಮಾಡತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದರು.
ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ದೆಹಲಿ ಭೇಟಿಯಲ್ಲಿ ಲೋಕಸಭಾ ಚುನಾವಣೆ ಪೂರ್ವ ತಯಾರಿ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಅಳೆದು ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎಂದು ಹೇಳಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ನೀಡಿದ್ದಾರೆ. ಐದು ಗ್ಯಾರಂಟಿ ಭರವಸೆಯನ್ನು ಆರು ತಿಂಗಳಲ್ಲಿ ಈಡೇರಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದ ಮಾಡುವ ವಿಶ್ವಾಸವಿದೆ. ಹೆಚ್ಚಾಗಿ ಬಿಜೆಪಿಗಿಂತ ಕಾಂಗ್ರೆಸ್ ಲೋಕಸಭಾದಲ್ಲಿ ಹೆಚ್ಚಿನ ಸ್ಥಾನ ಗೆಲುವು ಸಾಧಿಸಲಿದೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸ್ಲೀಪಿಂಗ್ ಅಭಿಯಾನ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ಇದೀಗ ಎಚ್ಚರ ಆಗಿದೆ ಎಂದು ಲೇವಡಿ ಮಾಡಿದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವಿಗೆ ನಾನು ಬದ್ದ, ನಾನು ಶ್ರೀರಾಮನ ಭಕ್ತೆ, ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಧಾರವಾಡ ಲೋಕಸಭಾ ಟಿಕೆಟ್ ವಿಚಾರ
ಧಾರವಾಡ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿ, ರಾಜ್ಯದ ಎಲ್ಲ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕುರಿತು ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳತ್ತಾರೆ. ಜಾತಿವಾರು, ಪ್ರಾಂತ್ಯ ಸೇರಿದಂತೆ ಪ್ರಸಿದ್ದತೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದೀಗ ನಮಗೆ ಒಪ್ಪಿಸಿದ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.