ರೈತರ ಬೇಡಿಕೆ ಈಡೇರಿಸಿ, ನಿಮ್ಮ ಗಂಟೇನೂ ಹೋಗಲ್ಲ ಜೋಶಿಯವರೇ!
ರೈತರ ಹಿತ ಕಾಯಲು ನಿಮಗೇನು ಕಷ್ಟ? ಜೋಶಿಗೆ ತೊರಗಲ್ ಪ್ರಶ್ನೆ!

ಹುಬ್ಬಳ್ಳಿ: ಕಬ್ಬಿಗೆ ಪ್ರತಿ ಟನ್ಗೆ 5,500 ದರ ನಿಗದಿಪಡಿಸಿ, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿದಂತೆ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟದ ಕಿಚ್ಚು ಮತ್ತಷ್ಟು ವ್ಯಾಪಿಸಲಿದೆ. ಪರಿಸ್ಥಿತಿ ಕೈಮೀರುವ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಧ್ಯಪ್ರವೇಶಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಇಲ್ಲವಾದರೆ ಹುಬ್ಬಳ್ಳಿಯಲ್ಲೂ ರಸ್ತೆ ತಡೆ ಹೋರಾಟಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಹಿರಿಯ ಮುಖಂಡ ಐ.ಎಂ. ತೊರಗಲ್ ನೇರ ಎಚ್ಚರಿಕೆ ನೀಡಿದರು.
https://www.facebook.com/share/v/18E2kd8i8d/
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸೂಕ್ತವಾಗಿ ಸ್ಪಂದಿಸದಿರುವುದು ಖಂಡನೀಯ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಉನ್ನತ ಸ್ಥಾನದಲ್ಲಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಜವಾಬ್ದಾರಿ ಹೊಂದಿದ್ದಾರೆ. ರೈತರು ಈ ಹಿಂದೆ ಹುಬ್ಬಳ್ಳಿಯಲ್ಲಿ ಹೋರಾಟ ನಡೆಸಿದಾಗ ನೀಡಿದ್ದ ಭರವಸೆಗಳನ್ನು ನಂಬಿ ಪ್ರತಿಭಟನೆ ಹಿಂಪಡೆದಿದ್ದರು. ಆದರೆ, ದೆಹಲಿಯಲ್ಲಿ ನಡೆದ ಸಭೆಯಲ್ಲೂ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದಿರುವುದು ರೈತರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
https://www.instagram.com/reel/DegAidwyCQy/?mdxt=MTQ0ZmVtZWVkYXNqeg==
ಭರವಸೆಗಳಿಂದ ರೈತರ ಹೊಟ್ಟೆ ತುಂಬುವುದಿಲ್ಲ; ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ಸೂಕ್ತ ದರ ಸಿಗಬೇಕೆಂದು ಹೋರಾಡುತ್ತಿದ್ದಾರೆ. ಪ್ರತಿ ಟನ್ಗೆ 5,500 ದರ ನಿಗದಿ ಹಾಗೂ ಸ್ವಾಮಿನಾಥನ್ ವರದಿ ಜಾರಿಯಂತಹ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬದಲು ರೈತರನ್ನು ಕಾಯಿಸುವುದು ಸರಿಯಲ್ಲ. ರೈತರ ತಾಳ್ಮೆಯನ್ನು ಪರೀಕ್ಷಿಸದೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತರ ಪ್ರತಿಭಟನೆಗಳು ರಾಷ್ಟ್ರೀಯ ಹೆದ್ದಾರಿಗಳಿಗೂ ವ್ಯಾಪಿಸುತ್ತಿದ್ದು, ಸಾರ್ವಜನಿಕ ಸಂಚಾರ ಹಾಗೂ ಅಗತ್ಯ ವಸ್ತುಗಳ ಸಾಗಾಟಕ್ಕೆ ಅಡಚಣೆ ಉಂಟಾಗುತ್ತಿದೆ. ಹೋರಾಟದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ರೈತರ ಆಕ್ರೋಶ ಹೆಚ್ಚಾದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ, ಈಗಲೇ ಸಮಸ್ಯೆ ಬಗೆಹರಿಸುವುದು ಜಾಣತನ ಎಂದು ಎಚ್ಚರಿಸಿದರು.
ರಾಜ್ಯದ ಸಚಿವರು, ವಿಶೇಷವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ರೈತರ ಸಂಕಷ್ಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪರಿಹಾರಕ್ಕೆ ಮುಂದಾಗಬೇಕು. ರೈತರ ಸಮಸ್ಯೆ ಕೇವಲ ಒಂದು ವರ್ಗದ ಸಮಸ್ಯೆಯಲ್ಲ; ಅದು ಕೃಷಿ ಆರ್ಥಿಕತೆ ಮತ್ತು ಜನಜೀವನಕ್ಕೆ ಸಂಬಂಧಿಸಿದ ಗಂಭೀರ ವಿಚಾರವಾಗಿದೆ ಎಂದು ಹೇಳಿದರು.
ದೇಶದ ಬೆನ್ನೆಲುಬಾದ ರೈತನೇ ಇಂದು ತನ್ನ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಸಂಕಷ್ಟ ಎದುರಿಸುತ್ತಿದ್ದಾನೆ. ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಆದ್ಯತೆಯಾಗಬೇಕು. ಕಬ್ಬಿಗೆ 5,500 ದರ ನಿಗದಿ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು. ಇಲ್ಲವಾದರೆ ರೈತರ ಹೋರಾಟದ ಕಾವು ಹುಬ್ಬಳ್ಳಿಗೂ ತಟ್ಟುವ ಸಾಧ್ಯತೆಯಿದೆ ಎಂದು ಐ.ಎಂ. ತೊರಗಲ್ ಎಚ್ಚರಿಸಿದರು.




