
ಹುಬ್ಬಳ್ಳಿ: ನಗರದ ವಿದ್ಯಾನಗರದಲ್ಲಿರುವ ಮಂಗಳೂರು ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಕಂಪು ಪಸರಿಸುವಂತೆ ಸಂಭ್ರಮದಿಂದ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸುಧಾಕರ್ ಶೆಟ್ಟಿ, ಕಾಲೇಜಿನ ಡೀನ್ ಪ್ರದೀಪ್ ಶೆಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಏಕಪಾತ್ರಾಭಿನಯ, ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಅದರಲ್ಲೂ ಪ್ರತೀಕ್ಷಾ ಹೆಗಡೆ ಅವರ ಮನೋಜ್ಞ ಏಕಪಾತ್ರಾಭಿನಯ ಪ್ರೇಕ್ಷಕರ ಮನಸೂರೆಗೊಂಡಿತು. ಈ ಮೂಲಕ ಅವರು ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ನಾಡು-ನುಡಿಯ ಅಭಿಮಾನ ಬೆಳೆಸುವ ನಿಟ್ಟಿನಲ್ಲಿ ಕಾಲೇಜು ಹಮ್ಮಿಕೊಂಡ ಈ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು. ಕನ್ನಡದ ಸಂಸ್ಕೃತಿ, ಪರಂಪರೆ ಹಾಗೂ ಅಭಿಮಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಕಾಲೇಜು ಮತ್ತು ಆಡಳಿತ ಮಂಡಳಿಯ ಪ್ರಯತ್ನ ಮಹತ್ವದ ಪಾತ್ರ ವಹಿಸಿದೆ.




